Friday, October 16, 2026
HomeDistrictsBallariಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕರಿಸಿ ಪ್ರತಿಭಟನೆ

ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕರಿಸಿ ಪ್ರತಿಭಟನೆ

[ವರದಿ : ಜಿ ಎಂ ಬಸಯ್ಯ]
ಕುರುಗೋಡು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ, ವಿವಿಧ ಸಮುದಾಯಗಳ ಮುಖಂಡರು ಕುರುಗೋಡು ತಹಸೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿದ ಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ, ಮೀಸಲಾತಿ ಹೆಚ್ಚಳದ ವಿಚಾರವನ್ನು ಪುನರ್‌ಪರಿಶೀಲಿಸಿ, ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಮಾಜದ ಮುಖಂಡ ವಿ.ಎಸ್. ಶಿವಶಂಕರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಂವಿಧಾನದ ಒಂಬತ್ತನೇ ಅನುಸೂಚಿಗೆ ಅಗತ್ಯ ತಿದ್ದುಪಡಿ ತರಬೇಕು. ಈ ಕುರಿತು ಸಂಸತ್ತಿನಲ್ಲಿ ಮಸೂದೆ ಮಂಡಿಸಿ, ಮೀಸಲಾತಿ ಹೆಚ್ಚಳದ ಬೇಡಿಕೆಗೆ ಕಾನೂನಾತ್ಮಕ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಕಳೆದ ಮೂರು ವರ್ಷಗಳಿಂದ ಕರ್ನಾಟಕದ ಲೋಕಸಭಾ ಸದಸ್ಯರು ಮೀಸಲಾತಿ ಹೆಚ್ಚಳದ ವಿಚಾರವಾಗಿ ಲೋಕಸಭೆಯಲ್ಲಿ ಸಮರ್ಪಕವಾಗಿ ಧ್ವನಿ ಎತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜ್ಯದ ಸಂಸದರು ಸೇರಿದಂತೆ ದೇಶದ ಎಲ್ಲ ಲೋಕಸಭಾ ಸದಸ್ಯರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಂಸತ್ತಿನಲ್ಲಿ ಚರ್ಚೆ ನಡೆಸಿ ಮೀಸಲಾತಿ ಹೆಚ್ಚಳದ ಬೇಡಿಕೆಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷಗಳ ಸಭೆ ಕರೆದು ಮೀಸಲಾತಿ ಹೆಚ್ಚಳದ ಕುರಿತು ಚರ್ಚಿಸಬೇಕು. ಬಳಿಕ ಎಲ್ಲ ಪಕ್ಷಗಳ ಮುಖಂಡರನ್ನು ಒಳಗೊಂಡ ನಿಯೋಗವನ್ನು ದೆಹಲಿಗೆ ಕರೆದೊಯ್ದು, ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಗತ್ಯ ಮಸೂದೆ ಮಂಡಿಸುವಂತೆ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಬೇಕು ಎಂದು ಶಿವಶಂಕರ ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಕಡೆಗಣಿಸದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿತ್ತು.

ಪ್ರತಿಭಟನೆಯಲ್ಲಿ ವಿವಿಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರಾದ ನಂ. 3 ನಾಗರಾಜ್, ಸಿದ್ದಪ್ಪ, ಕಲ್ಗುಡೆಪ್ಪ, ಶಿವಕುಮಾರ್, ಅಂಬಣ್ಣ, ಮಲ್ಲಿಕಾರ್ಜುನ, ಜಡೆಪ್ಪ, ಸೀನಪ್ಪ, ಹನುಮಂತ, ಬಸವರಾಜ್, ಸೋಮಪ್ಪ ಹಾಗೂ ಭೀಮಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments