ಸಂಡೂರು/ಬಳ್ಳಾರಿ: ಬಳ್ಳಾರಿಯ ಎಸ್.ಜಿ. ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸಂಡೂರು ತಾಲ್ಲೂಕಿನ ಚೋರನೂರು ಶಾಲೆಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.
ಪಂದ್ಯಾವಳಿಯಲ್ಲಿ ಚೋರನೂರಿನ ವಿಶ್ವಸ್ಫೂರ್ತಿ ಪ್ರಾಥಮಿಕ ಶಾಲೆಯ ಬಾಲಕರು ಪ್ರಥಮ ಸ್ಥಾನ ಗಳಿಸಿದರೆ, ಬಾಲಕಿಯರು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಇದೇ ವೇಳೆ, ಚೋರನೂರು ಸರ್ಕಾರಿ ಪ್ರೌಢಶಾಲೆಯ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನ ಗಳಿಸುವ ಮೂಲಕ ಕಲಬುರಗಿ ವಿಭಾಗ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆ ಶಾಲಾ ಶಿಕ್ಷಕರು, ಪೋಷಕರು ಹಾಗೂ ಕ್ರೀಡಾಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಜಿಲ್ಲಾಮಟ್ಟದ ಪಂದ್ಯಾವಳಿಯಲ್ಲಿ ವಿದ್ಯಾರ್ಥಿಗಳು ತೋರಿದ ಕ್ರೀಡಾಸ್ಫೂರ್ತಿ, ಸಂಘಟಿತ ಆಟ, ಶಿಸ್ತು ಹಾಗೂ ಗೆಲುವಿನ ಛಲ ಅವರ ಸಾಧನೆಗೆ ಪ್ರಮುಖ ಕಾರಣವಾಗಿದೆ. ನಿರಂತರ ಅಭ್ಯಾಸ ಮತ್ತು ಶಿಕ್ಷಕರ ಮಾರ್ಗದರ್ಶನದಿಂದ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದು, ಮುಂದಿನ ಹಂತದ ಪಂದ್ಯಾವಳಿಗಳಲ್ಲಿಯೂ ಇದೇ ರೀತಿಯ ಸಾಧನೆ ಮುಂದುವರಿಸುವ ನಿರೀಕ್ಷೆ ವ್ಯಕ್ತವಾಗಿದೆ.
ಕಬಡ್ಡಿ ಸ್ಪರ್ಧೆಯಲ್ಲೂ ವಿದ್ಯಾರ್ಥಿಗಳ ಸಾಧನೆ:
ಬಾಲ್ ಬ್ಯಾಡ್ಮಿಂಟನ್ನಲ್ಲಿ ಚೋರನೂರು ಶಾಲೆಗಳ ವಿದ್ಯಾರ್ಥಿಗಳು ಮಿಂಚಿದ್ದರೆ, ಅಂಕಮ್ಮನಹಾಳು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಸಂಡೂರು ತಾಲ್ಲೂಕಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ.
ಶಾಲಾ ಹಂತದಿಂದಲೇ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಸೂಕ್ತ ತರಬೇತಿ, ಪ್ರೋತ್ಸಾಹ ಮತ್ತು ಮಾರ್ಗದರ್ಶನ ದೊರೆತರೆ ಅವರು ಜಿಲ್ಲಾ, ವಿಭಾಗ ಹಾಗೂ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಈ ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಾರೆ. ಪಠ್ಯದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡುವುದರಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮರ್ಥ್ಯ, ಆತ್ಮವಿಶ್ವಾಸ, ತಂಡದ ಮನೋಭಾವ ಹಾಗೂ ಶಿಸ್ತು ಬೆಳೆಯಲು ಸಹಕಾರಿಯಾಗುತ್ತದೆ.
ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ:
ಬಾಲ್ ಬ್ಯಾಡ್ಮಿಂಟನ್ ಮತ್ತು ಕಬಡ್ಡಿ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಸುಧರ್ಶನ್, ಮಹೇಶ್, ಪ್ರಜ್ವಲ್, ಅರುಣ, ತರುಣ, ಮುಸ್ಕಾನ್, ಅನುರಾಧ, ಅಮೃತ, ಪುಷ್ಪ ಹಾಗೂ ಹರ್ಷಿಯಾ ಅವರ ಸಾಧನೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಾಲಾ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ, ಕ್ಷೇತ್ರ ಸಂಪನ್ಮೂಲಾಧಿಕಾರಿ ಶರಣಬಸಪ್ಪ ಕರೀಶೆಟ್ಟಿ, ಇಸಿಒ ಗೂಳಪ್ಪ ಬೆಳ್ಳಕಟ್ಟೆ, ದೈಹಿಕ ಶಿಕ್ಷಣ ವಿಷಯ ಪರಿವೀಕ್ಷಕ ಬೇವಿನಕಟ್ಟಿ ಜಗದೀಶ ಸೇರಿದಂತೆ ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ-ಸಿಬ್ಬಂದಿ ವರ್ಗ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳು ಮುಂದಿನ ಹಂತದ ಸ್ಪರ್ಧೆಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಿ ರಾಜ್ಯ ಹಾಗೂ ಇನ್ನಿತರ ಉನ್ನತ ಮಟ್ಟದ ಪಂದ್ಯಾವಳಿಗಳಲ್ಲಿ ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ. ಗ್ರಾಮೀಣ ಭಾಗದ ಶಾಲಾ ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಯು ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದ್ದು, ಸಂಡೂರು ತಾಲ್ಲೂಕಿನ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದ ಗೌರವವನ್ನು ಹೆಚ್ಚಿಸಿದೆ.
