[ವರದಿ ; ಜಿ ಎಂ ಬಸಯ್ಯ]
ಕುರುಗೋಡು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮಾಜದ ಪ್ರತಿಯೊಂದು ವರ್ಗದ ಜನರಿಗೆ ನೆರವಾಗುವ ಮೂಲಕ ಜನಪರ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದು ಎಚ್. ವೀರಾಪುರ ಗ್ರಾಮದ ಜಡೇಶ್ ತಾತನವರು ಹೇಳಿದರು.
ಕುರುಗೋಡು ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕಂಪ್ಲಿ ತಾಲೂಕು ವತಿಯಿಂದ ಆಯೋಜಿಸಿದ್ದ ಸಹಸ್ರ ಬಿಲ್ವಾರ್ಚನೆ ಪೂಜೆ ಹಾಗೂ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ವ್ಯಕ್ತಿ ತನ್ನ ಜೀವನಶೈಲಿಯನ್ನು ಬದಲಾಯಿಸಿಕೊಳ್ಳುವ ಭರದಲ್ಲಿ ಸುಖ, ಶಾಂತಿ ಹಾಗೂ ನೆಮ್ಮದಿಯನ್ನು ಕಳೆದುಕೊಳ್ಳುತ್ತಿದ್ದಾನೆ. ದೈನಂದಿನ ಜೀವನ ನಿರ್ವಹಣೆಗೆ ಅಗತ್ಯವಿರುವಷ್ಟು ಹಣವನ್ನು ಬಳಸಿಕೊಂಡು, ಉಳಿದ ಹಣವನ್ನು ಭವಿಷ್ಯದ ಬದುಕಿಗಾಗಿ ಉಳಿತಾಯ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಾದೇಶಿಕ ವಿಭಾಗದ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವಿವಿಧ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.
ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಹಸ್ರ ಬಿಲ್ವಾರ್ಚನೆ ಪೂಜೆಯನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಸಂಘದ ಸದಸ್ಯರು ಹಾಗೂ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
