Friday, November 27, 2026
HomeDistrictsBengaluru Cityಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗೆ 14 ಅಂಶಗಳ ಕ್ರಮಕ್ಕೆ ಆಗ್ರಹಪೋಕ್ಸೋ ಜಾಗೃತಿಗೆ ವಿಶೇಷ ಅಭಿಯಾನ ನಡೆಸಲು ಶಿಕ್ಷಣ...

ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗೆ 14 ಅಂಶಗಳ ಕ್ರಮಕ್ಕೆ ಆಗ್ರಹಪೋಕ್ಸೋ ಜಾಗೃತಿಗೆ ವಿಶೇಷ ಅಭಿಯಾನ ನಡೆಸಲು ಶಿಕ್ಷಣ ಇಲಾಖೆಗೆ ಮೋಹನ್ ಕುಮಾರ್ ದಾನಪ್ಪ ಪತ್ರ

ಬೆಂಗಳೂರು, ನ. 24: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಾಗೂ ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಮತ್ತು ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸಲು 14 ಅಂಶಗಳ ಸಮಗ್ರ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಅವರು ಆಗ್ರಹಿಸಿದ್ದಾರೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪೋಕ್ಸೋ (POCSO) ಕಾಯ್ದೆ ಕುರಿತು ವ್ಯಾಪಕ ಜಾಗೃತಿ ಮೂಡಿಸುವುದರ ಜೊತೆಗೆ ಮಕ್ಕಳಿಗೆ ಸುರಕ್ಷಿತ ಶೈಕ್ಷಣಿಕ ವಾತಾವರಣ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 12 ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿದ್ದು, 2023ರಿಂದ 2026ರ ಜುಲೈವರೆಗೆ ಒಟ್ಟು 15,240 ಪ್ರಕರಣಗಳು ವರದಿಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಕೇವಲ ಕಾನೂನು ಮತ್ತು ಪೊಲೀಸ್ ಇಲಾಖೆಗಳ ಜವಾಬ್ದಾರಿಯಾಗಿ ಪರಿಗಣಿಸದೆ, ಶಿಕ್ಷಣ ಸಂಸ್ಥೆಗಳು ಹಾಗೂ ಪೋಷಕರು ಕೂಡ ಹೆಚ್ಚಿನ ಜವಾಬ್ದಾರಿ ವಹಿಸಬೇಕಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

14 ಅಂಶಗಳ ಪ್ರಮುಖ ಸಲಹೆಗಳು:

ಶಾಲಾ ಮಕ್ಕಳಿಗೆ ಸರಳ ಭಾಷೆಯಲ್ಲಿ ಪೋಕ್ಸೋ ಕಾಯ್ದೆ, ಗುಡ್ ಟಚ್–ಬ್ಯಾಡ್ ಟಚ್ ಹಾಗೂ ಸೈಬರ್ ಸುರಕ್ಷತೆ ಕುರಿತು ನಿರಂತರ ಅರಿವು ಮೂಡಿಸಬೇಕು. ಶಿಕ್ಷಕರು ಮತ್ತು ಸಿಬ್ಬಂದಿಗೆ ಮಕ್ಕಳ ಮೇಲಿನ ದೌರ್ಜನ್ಯದ ಲಕ್ಷಣಗಳನ್ನು ಗುರುತಿಸುವುದು ಹಾಗೂ ಕಾನೂನುಬದ್ಧವಾಗಿ ದೂರು ಸಲ್ಲಿಸುವ ಕುರಿತು ವಿಶೇಷ ತರಬೇತಿ ನೀಡಬೇಕು.

ಪ್ರತಿ ಶಾಲೆಯಲ್ಲೂ ಮಕ್ಕಳ ಸುರಕ್ಷತಾ ಸಮಿತಿ ರಚಿಸಿ, ಗೌಪ್ಯ ದೂರು ಪೆಟ್ಟಿಗೆ ಅಳವಡಿಸಬೇಕು. ವರ್ಷಕ್ಕೆ ಕನಿಷ್ಠ ಎರಡು ಬಾರಿ ಪೋಷಕರ ಸಭೆ ನಡೆಸಿ ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸಬೇಕು.

ಶಾಲಾ ಆವರಣ, ಶೌಚಾಲಯ, ಆಟದ ಮೈದಾನ ಹಾಗೂ ಶಾಲಾ ವಾಹನಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಅಗತ್ಯ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಶಾಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಯ ಪೊಲೀಸ್ ಹಿನ್ನೆಲೆ ಪರಿಶೀಲನೆಯನ್ನು ಕಡ್ಡಾಯಗೊಳಿಸಬೇಕು.

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಮುಚ್ಚಿಡದೆ, ಪೋಕ್ಸೋ ಕಾಯ್ದೆಯ ಸೆಕ್ಷನ್ 19ರ ಅನ್ವಯ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಬೇಕು. ಸಂತ್ರಸ್ತ ಮಕ್ಕಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು ಹಾಗೂ ಸೂಕ್ತ ರಕ್ಷಣೆ ಒದಗಿಸಬೇಕು. ಅಲ್ಲದೆ, ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಪ್ರತಿ ವರ್ಷ ಶಾಲೆಗಳ ಸುರಕ್ಷತಾ ವ್ಯವಸ್ಥೆಯ ಪರಿಶೀಲನೆ ನಡೆಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಘಟನೆಗೂ ಮುನ್ನವೇ ತಡೆಗಟ್ಟುವುದು ಮುಖ್ಯ:

ಮಕ್ಕಳ ಮೇಲಿನ ದೌರ್ಜನ್ಯ ನಡೆದ ನಂತರ ಕಾನೂನು ಕ್ರಮ ಕೈಗೊಳ್ಳುವುದಷ್ಟೇ ಇಲಾಖೆಗಳ ಜವಾಬ್ದಾರಿಯಾಗಬಾರದು. ಇಂತಹ ಘಟನೆಗಳು ಸಂಭವಿಸುವುದಕ್ಕೂ ಮುನ್ನವೇ ಅವುಗಳನ್ನು ತಡೆಗಟ್ಟುವಂತಹ ಸುರಕ್ಷಿತ ವಾತಾವರಣ ನಿರ್ಮಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮೋಹನ್ ಕುಮಾರ್ ದಾನಪ್ಪ ಅವರು ಒತ್ತಿಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಕ್ರಮ ಬೋಧಿಸುವ ಕೇಂದ್ರಗಳಾಗದೆ, ಮಕ್ಕಳಲ್ಲಿ ಸುರಕ್ಷತೆಯ ಅರಿವು, ಆತ್ಮವಿಶ್ವಾಸ, ಸ್ವಯಂ ರಕ್ಷಣಾ ಸಾಮರ್ಥ್ಯ ಹಾಗೂ ತಮ್ಮ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಜವಾಬ್ದಾರಿಯುತ ಕೇಂದ್ರಗಳಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು 14 ಅಂಶಗಳ ಮುನ್ನೆಚ್ಚರಿಕಾ ಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments