Thursday, November 26, 2026
HomeDistrictsBallariಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಉಜ್ವಲ ಭವಿಷ್ಯ ರೂಪಿಸಿ: ನಟಿ ವಂದನಾ ರೈ

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಉಜ್ವಲ ಭವಿಷ್ಯ ರೂಪಿಸಿ: ನಟಿ ವಂದನಾ ರೈ

[ವರದಿ: ಜಿ.ಎಂ. ಬಸಯ್ಯ]

ಕಂಪ್ಲಿ: ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರು ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ‘ಪ್ರೇಮದ ಊರಲ್ಲಿ’ ಚಿತ್ರದ ನಟಿ ವಂದನಾ ರೈ ಅಭಿಪ್ರಾಯಪಟ್ಟರು.

ಪಟ್ಟಣದ ಕೊಟ್ಟಾಲ್ ರಸ್ತೆಯ ಸತ್ಯನಾರಾಯಣ ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ, ಮಕ್ಕಳ ನೃತ್ಯ ವೈಭವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತಾಪಿ ಕುಟುಂಬಗಳು ಸೇರಿದಂತೆ ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವತ್ತ ಹೆಚ್ಚಿನ ಗಮನಹರಿಸಬೇಕು. ಶಿಕ್ಷಣದಿಂದ ರಾಜಕೀಯ ಸೇರಿದಂತೆ ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಸಾಧನೆ ಮಾಡಲು ಸಾಧ್ಯವಿದೆ. ಇಂದಿನ ಆಧುನಿಕ ಯುಗದಲ್ಲಿ ವಾಟ್ಸ್‌ಆ್ಯಪ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಓದಿನ ಆಸಕ್ತಿ ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಪೋಷಕರು ಶಿಕ್ಷಕರಿಗೆ ಸೂಕ್ತ ಸಹಕಾರ ನೀಡಿದಾಗ ಮಾತ್ರ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ವಿ. ವಸಂತ್ ಮಾತನಾಡಿ, ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳಾಗಿದ್ದು, ಶಿಕ್ಷಣದ ಜೊತೆಗೆ ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಇದರಿಂದ ಮಕ್ಕಳಲ್ಲಿ ಪ್ರತಿಭೆ ವಿಕಸನಗೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಶಿಕ್ಷಕರು ಹಾಗೂ ಮಕ್ಕಳ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ತಾಲೂಕು ಸಂಘದ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಂತರ ‘ಪ್ರೇಮದ ಊರಲ್ಲಿ’ ಚಿತ್ರತಂಡದ ನಟಿ ವಂದನಾ ರೈ ಹಾಗೂ ಮಕ್ಕಳು ಹಾಡುಗಳನ್ನು ಹಾಡಿ ಗಮನ ಸೆಳೆದರು. ಮಕ್ಕಳಿಂದ ನಡೆದ ಭರತನಾಟ್ಯ, ವಿವಿಧ ನೃತ್ಯಗಳು, ಯೋಗ ಪ್ರದರ್ಶನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾದವು. ಕಾರ್ಯಕ್ರಮದ ಯಶಸ್ಸಿನ ಸಂಭ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಅಧ್ಯಕ್ಷ ಕೆ. ಶ್ರೀನಿವಾಸರಾವ್, ದಿಶಾ ಸಮಿತಿ ಸದಸ್ಯ ಎ.ಸಿ. ದಾನಪ್ಪ, ಜೆಸ್ಕಾಂ ನಿರ್ದೇಶಕ ಕೆ. ಷಣ್ಮುಖಪ್ಪ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಸ್ಥಾಪಕ ಕಾರ್ಯಾಧ್ಯಕ್ಷ ನಾಗನಗೌಡ ಎಂ.ಎ., ಪ್ರಧಾನ ಕಾರ್ಯದರ್ಶಿ ಜೋಗಿ ರುದ್ರಪ್ಪ ನಾಯಕ್, ಗೌರವಾಧ್ಯಕ್ಷ ಚಂದ್ರಶೇಖರ ಶೆಟ್ರು, ಕಾರ್ಯಾಧ್ಯಕ್ಷ ಎಚ್.ಪಿ. ಸೋಮಶೇಖರ್, ಹಿರಿಯ ಉಪಾಧ್ಯಕ್ಷರಾದ ಹನುಮನಗೌಡ, ಖಲೀಲ್ ಸಾಬ್, ರೂಪಕಲಾ, ಉಪಾಧ್ಯಕ್ಷರಾದ ರೇವಣಸಿದ್ದೇಶ್, ಶಾಂತಾ ಗಡ್ಡದ, ಖಜಾಂಚಿ ಪರಶುರಾಮ್ ಪವಾರ್, ಸಹಕಾರ್ಯದರ್ಶಿಗಳಾದ ಶಂಕರಮೂರ್ತಿ, ನಜಾಹತ್ ಜಬೀಲ್, ಸಂಘಟನಾ ಕಾರ್ಯದರ್ಶಿಗಳಾದ ಬಸವರಾಜ್ ಶಿಡೆಗಲ್, ರತ್ನಮ್ಮ ಬಡಿಗೇರ್, ಮುಖಂಡರಾದ ಜಿ. ರಾಮಣ್ಣ, ಬಿ. ಸಿದ್ದಪ್ಪ, ಜಾಫರ್ ಸೇರಿದಂತೆ ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕರು, ಪೋಷಕರು, ಶಿಕ್ಷಣ ಪ್ರೇಮಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments