Wednesday, August 12, 2026
HomeDistrictsBallariಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಗುಣಮಟ್ಟದ ಜನಸೇವೆಗೆ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಕಟ್ಟುನಿಟ್ಟಿನ ಸೂಚನೆ

ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಗುಣಮಟ್ಟದ ಜನಸೇವೆಗೆ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಕಟ್ಟುನಿಟ್ಟಿನ ಸೂಚನೆ

ಬಳ್ಳಾರಿ,ಆ.11:ರಾಜ್ಯ ಸರ್ಕಾರದ ವಿನೂತನ ಯೋಜನೆಗಳಾದ ‘ಪ್ರಜಾಸೇವೆ’, ‘ಭಾರತ್ ಜೋಡೋ’ ಸಂಘಗಳ ರಚನೆ ಹಾಗೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಮತ್ತು ಕಾರ್ಯಾಚರಣೆ ಅಭಿಯಾನಗಳಾದ ‘ಬೇಡ ಬ್ರೋ’ ಮತ್ತು ‘ಆಪರೇಷನ್ ರೈಸ್’ ಕಾರ್ಯಕ್ರಮಗಳನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಂಗಳವಾರ, ಮುಖ್ಯಮಂತ್ರಿಯವರ ಕರ್ನಾಟಕ ಸರ್ಕಾರ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ನಗರದ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ‘ಪ್ರಜಾಸೇವೆ’ ಆಂದೋಲನವನ್ನು ಕಡ್ಡಾಯವಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಗುಣಮಟ್ಟದ ದೂರು ವಿಲೇವಾರಿಗೆ ಆದ್ಯತೆ:
ಮುಖ್ಯಮಂತ್ರಿಗಳ ಆಶಯದಂತೆ ಸಾರ್ವಜನಿಕರ ಅರ್ಜಿಗಳನ್ನು ಕೇವಲ ಮೇಲಾಧಿಕಾರಿಗಳಿಗೆ ಫಾರ್ವರ್ಡ್ ಮಾಡಿ ಕ್ಲೋಸ್ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಸಾರ್ವಜನಿಕರ ಕುಂದುಕೊರತೆಗಳಿಗೆ ನೈಜ ಹಾಗೂ ಗುಣಮಟ್ಟದ ಪರಿಹಾರ ನೀಡಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಈ ಆಂದೋಲನ ನಡೆಯುವ ಶನಿವಾರಗಳಂದು ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿಯೇ ಉಪಸ್ಥಿತರಿರಬೇಕು ಎಂದರು.

ಇಲಾಖೆಗಳ ಜಂಟಿ ಸಮೀಕ್ಷೆ ಮತ್ತು ತ್ವರಿತ ಪೂರ್ಣ:
ಕಂದಾಯ ಮತ್ತು ನಗರಾಭಿವೃದ್ಧಿ ಇಲಾಖೆಗಳು ಜಂಟಿಯಾಗಿ ಎಸ್‌ಐಆರ್ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿದ್ದು, ಈಗಾಗಲೇ ಅಸಂಗತತೆಗಳನ್ನು ಗಣನೀಯವಾಗಿ ಕಡಿಮೆಗೊಳಿಸಲಾಗಿದೆ. ಸಾರ್ವಜನಿಕರಿಂದ ಸ್ವೀಕರಿಸಲಾದ ಫಾರ್ಮ್ಗಳಲ್ಲಿನ ದೋಷಗಳನ್ನು ಸರಿಪಡಿಸಲು ಜಂಟಿ ಕ್ರಿಯಾ ಯೋಜನೆ ರೂಪಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತಿದೆ. ಈ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ನಶಾ ಮುಕ್ತ ಭಾರತ್ ಅಭಿಯಾನ:
ಗೃಹ ಸಚಿವರ ನಿರ್ದೇಶನದಂತೆ ‘ನಶಾ ಮುಕ್ತ ಭಾರತ್’ ಅಭಿಯಾನದಡಿ ಜಿಲ್ಲೆಯಲ್ಲಿ ‘ಅಪರೇಷನ್ ರೈಸ್’ ಮತ್ತು ‘ಬೇಡ ಬ್ರೋ’ ಎಂಬ ಎರಡು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಂಬAಧಪಟ್ಟ ಇತರ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮದಡಿ ಅತ್ಯುತ್ತಮ ಸಾಧನೆ ಮಾಡಿದ್ದು, ಇದನ್ನು ಮುಂಬರುವ ದಿನಗಳಲ್ಲಿ ಮತ್ತಷ್ಟು ಕ್ರಿಯಾಶೀಲವಾಗಿ ಮುಂದುವರಿಸಬೇಕು ಎಂದು ನಿರ್ದೇಶನ ನೀಡಿದರು.

ಅಧಿಕಾರಿಗಳು ಕೇವಲ ತಮ್ಮ ಇಲಾಖೆಗೆ ಮಾತ್ರ ಸೀಮಿತವಾಗದೆ, ಉತ್ತಮ ಭಾವನೆಯಿಂದ ಕೆಲಸ ಮಾಡಬೇಕಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ನೀಡಲಾಗುವ ಯಾವುದೇ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಮನೋಭಾವನೆಯನ್ನು ಹೊಂದಿರಬೇಕು. ಇಲಾಖೆಗಳ ನಡುವಿನ ಸಮನ್ವಯತೆಯಿಂದ ಜಿಲ್ಲೆಯಾದ್ಯಂತ ಉತ್ತಮ ಆಡಳಿತ ನೀಡಲು ಅಧಿಕಾರಿಗಳು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್, ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ. ಎನ್. ಬಸವರಾಜ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ- ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments