[ವರದಿ : ಜಿ ಎಂ ಬಸಯ್ಯ]
ಕುರುಗೋಡು: ದುಡಿಯುವ ಕೈಗಳಿಗೆ ನಿರಂತರ ಉದ್ಯೋಗ ಒದಗಿಸುವ ಉದ್ದೇಶದಿಂದ ವಿಬಿ-ಜಿ ರಾಮ್-ಜಿ ಯೋಜನೆಯಡಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜಾಬ್ ಕಾರ್ಡ್ ಮೇಳ ಆಯೋಜಿಸಿ, ಹೊಸದಾಗಿ ಜಾಬ್ ಕಾರ್ಡ್‌ಗಳನ್ನು ನೀಡುವ ಅಭಿಯಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕುರುಗೋಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಪಂಪಾಪತಿ ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಈಗಾಗಲೇ ಓರ್ವಾಯಿ ಹಾಗೂ ಯರಂಗಳಿಗಿ ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಜಾಬ್ ಕಾರ್ಡ್ ನೀಡುವ ಅಭಿಯಾನ ಆರಂಭಿಸಲಾಗಿದ್ದು, ಇದೇ ಮಾದರಿಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಜಾಬ್ ಕಾರ್ಡ್ ಮೇಳ ಆರಂಭಿಸುವಂತೆ ಸೂಚಿಸಲಾಯಿತು.
ವಿಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಜನರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಮುಂದಿನ ವರ್ಷದ ಯೋಜನೆಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ನರೇಗಾ ಶಿವರಾಮರೆಡ್ಡಿ, ಎಡಿಪಿಆರ್‌ಒ ರೇಣುಕಾಚಾರ್ಯ ಸ್ವಾಮಿ, ಯೋಜನಾಧಿಕಾರಿ ರಾಧಿಕಾ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
