Friday, September 11, 2026
HomeDistrictsKalaburagiಬೆಳೆ ವಿಮೆ ಪರಿಹಾರಕ್ಕೆ ಆಗ್ರಹ : ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿಗೆ ಮನವಿ

ಬೆಳೆ ವಿಮೆ ಪರಿಹಾರಕ್ಕೆ ಆಗ್ರಹ : ಬಾಕಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿಗೆ ಮನವಿ

ಕಲಬುರಗಿ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಪರಿಹಾರ ಸಿಗದೆ ಸಂಕಷ್ಟದಲ್ಲಿರುವ ರೈತರಿಗೆ 2023-24ರಿಂದ 2025-26ನೇ ಸಾಲಿನವರೆಗೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ, ಅರ್ಹ ರೈತರಿಗೆ ಬಡ್ಡಿ ಸಮೇತ ಪರಿಹಾರ ಪಾವತಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಆಳಂದ ಶಾಸಕ ಬಿ.ಆರ್. ಪಾಟೀಲ ಅವರ ನೇತೃತ್ವದಲ್ಲಿ ಗ್ರಾಹಕಪರ ಹೋರಾಟಗಾರ ಹಾಗೂ ನ್ಯಾಯವಾದಿ ವೈಜನಾಥ ಎಸ್. ಝಳಕಿ ಜಿಲ್ಲೆಯ ನೊಂದ ರೈತರ ಪರವಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ವಿವಿಧ ತಾಲೂಕುಗಳ ರೈತರು ಹಲವು ವರ್ಷಗಳಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮಾ ಕಂತುಗಳನ್ನು ನಿಯಮಿತವಾಗಿ ಪಾವತಿಸುತ್ತಿದ್ದರೂ, ಅವೈಜ್ಞಾನಿಕ ಬೆಳೆ ಕಟಾವು, ಬೆಳೆ ನಷ್ಟದ ಸರಿಯಾದ ಮೌಲ್ಯಮಾಪನದ ಕೊರತೆ ಹಾಗೂ ವಿಮಾ ಯೋಜನೆಗೆ ಸಂಬಂಧಿಸಿದ ಮಾಹಿತಿಯ ಅಭಾವದಿಂದ ಪರಿಹಾರದಿಂದ ವಂಚಿತರಾಗಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಬೆಳೆ ನಷ್ಟ ಅನುಭವಿಸಿದ ರೈತರು ಹಲವು ಬಾರಿ ಕೃಷಿ ಇಲಾಖೆ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ವಿಮಾ ಕಂಪನಿಗಳನ್ನು ಸಂಪರ್ಕಿಸಿದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಲಾಗಿದೆ.

2023-24ರಿಂದ 2025-26ನೇ ಸಾಲಿನವರೆಗೆ ಬಾಕಿ ಇರುವ ಎಲ್ಲಾ ಬೆಳೆ ವಿಮೆ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿಯಲ್ಲಿ ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು. ಅರ್ಹ ರೈತರಿಗೆ ಯಾವುದೇ ವಿಳಂಬವಿಲ್ಲದೆ ಬೆಳೆ ವಿಮೆ ಪರಿಹಾರ ಪಾವತಿಸುವಂತೆ ಸಂಬಂಧಪಟ್ಟ ವಿಮಾ ಕಂಪನಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅನಗತ್ಯ ವಿಳಂಬದಿಂದ ರೈತರಿಗೆ ಉಂಟಾದ ಆರ್ಥಿಕ ನಷ್ಟವನ್ನು ಪರಿಗಣಿಸಿ, ಕಾನೂನುಬದ್ಧ ಬಡ್ಡಿಯೊಂದಿಗೆ ವಿಮೆ ಪರಿಹಾರವನ್ನು ಪಾವತಿಸಲು ವಿಮಾ ಕಂಪನಿಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಲಾಗಿದೆ.

ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ವಿಮಾ ಕಂಪನಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಹಲವು ವರ್ಷಗಳಿಂದ ಬೆಳೆ ವಿಮೆಗಾಗಿ ಕಾಯುತ್ತಿರುವ ರೈತರಿಗೆ ಶೀಘ್ರವೇ ನ್ಯಾಯ ದೊರಕಿಸಿಕೊಡಬೇಕು ಎಂದು ಶಾಸಕ ಬಿ.ಆರ್. ಪಾಟೀಲ ಹಾಗೂ ನ್ಯಾಯವಾದಿ ವೈಜನಾಥ ಎಸ್. ಝಳಕಿ ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments