Wednesday, November 4, 2026
HomeDistrictsBallariಕುಡಿಯುವ ನೀರಿಗಾಗಿ ನಾರಿಯರ ಆಕ್ರೋಶ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಅಸಮಾಧಾನ

ಕುಡಿಯುವ ನೀರಿಗಾಗಿ ನಾರಿಯರ ಆಕ್ರೋಶ; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಅಸಮಾಧಾನ

[ವರದಿ : ಜಿ ಎಂ ಬಸಯ್ಯ]
ಕುರುಗೋಡು:ಸಮೀಪದ ಬೈಲೂರು ಗ್ರಾಮದ ಒಂದನೇ ವಾರ್ಡ್‌ನ ಚಲುವಾದಿ ಓಣಿಯಲ್ಲಿ ಕಳೆದ ಹಲವು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸಮರ್ಪಕ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಮಹಿಳೆಯರು ಖಾಲಿ ಕೊಡಪಾನಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು 150 ಮನೆಗಳಿರುವ ಈ ವಾರ್ಡ್‌ನಲ್ಲಿ ದಿನಪೂರ್ತಿ ನಲ್ಲಿ ಮುಂದೆ ಕಾಯ್ದರೂ ಒಂದು ಕೊಡಪಾನ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ 15ರಿಂದ 20 ದಿನಗಳಿಗೊಮ್ಮೆ ಮಾತ್ರ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿದ್ದು, ಕುಡಿಯುವ ನೀರು ಹಾಗೂ ಬಳಕೆಯ ನೀರಿನ ಸಮಸ್ಯೆಯಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಈ ಸಮಸ್ಯೆಯ ಕುರಿತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೇಸಿಗೆಯ ಸಂದರ್ಭದಲ್ಲಿ ನೀರಿನ ಅಭಾವ ಮತ್ತಷ್ಟು ಹೆಚ್ಚಾಗಿದ್ದು, ದಿನನಿತ್ಯದ ಅಗತ್ಯಗಳಿಗೂ ನೀರು ಸಿಗದೆ ಮಹಿಳೆಯರು ಪರದಾಡುವಂತಾಗಿದೆ.

ಗ್ರಾಮದ ಇತರೆ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲಾಗುತ್ತಿದ್ದರೂ, ತಮ್ಮ ವಾರ್ಡ್‌ನ ಬಗ್ಗೆ ಮಾತ್ರ ಅಧಿಕಾರಿಗಳು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಪರಿಶೀಲಿಸಿ, ಚಲುವಾದಿ ಓಣಿಗೆ ಪ್ರತಿದಿನ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಖಾಲಿ ಕೊಡಪಾನಗಳನ್ನು ಹಿಡಿದು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಚಲುವಾದಿ ಈರಮ್ಮ, ಸ್ಥಳೀಯ ನಿವಾಸಿ: “ಬೈಲೂರು ಗ್ರಾಮದ ಒಂದನೇ ವಾರ್ಡ್‌ನ ಚಲುವಾದಿ ಓಣಿಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಬಿರು ಬೇಸಿಗೆಯಲ್ಲಿಯೂ ನೀರು ಸಿಗದೆ ಜನರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಬೇರೆ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ನಮ್ಮ ವಾರ್ಡ್‌ಗೆ ಮಾತ್ರ ನೀರು ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ವಾರ್ಡ್‌ನ ಮಹಿಳೆಯರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದು, ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments